
ಬೆಂಗಳೂರು: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
“ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ ಘನ” ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ ಅವರು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ತಿಳಿಸಿದ್ದಾರೆ.