
ಕೋಲ್ಕತಾ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ದುರಂತ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಆಗ್ರಹಿಸಿದ್ದಾರೆ. ದೇಶದಲ್ಲಿ ಭದ್ರತೆ ಕುರಿತ ಆತಂಕವಿದ್ದು, ವಿಶೇಷವಾಗಿ ರಾಜಕಾರಣಿಗಳು ಸುರಕ್ಷಿತವಾಗಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಡಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಮತ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಇತರ ಸಂಸ್ಥೆಗಳ ಮೇಲಿನ ವಿಶ್ವಾಸ ಕಡಿಮೆಯಾಗಿದ್ದು, ಸುಪ್ರೀಂ ಕೋರ್ಟ್ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆಸಬಲ್ಲದು ಎಂದು ಹೇಳಿದ್ದಾರೆ. ಅಜಿತ್ ಪವಾರ್ ವಿಮಾನ ಪತನದ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಗೆ ಒಪ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ರಾಜಕೀಯ ನಾಯಕರು ಸದಾ ಪ್ರಯಾಣದಲ್ಲಿರುತ್ತಾರೆ ಎಂದು ಹೇಳಿ, ಅಹಮದಾಬಾದ್‌ನಲ್ಲಿ ಸಂಭವಿಸಿದ ದೊಡ್ಡ ವಿಮಾನ ದುರಂತದ ಬಳಿಕ ಈಗ ಚಿಕ್ಕ ವಿಮಾನ ಪತನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಘಟನೆಯ ಹಿನ್ನೆಲೆ ಹಾಗೂ ಕಾರಣಗಳ ಕುರಿತು ಸಮಗ್ರ ತನಿಖೆ ಅಗತ್ಯವಿದೆ ಎಂದು ಅವರು ಹೇಳಿದರು.



















