
ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ನಿನ್ನೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜಕೀಯದಲ್ಲಿ ಧರ್ಮಪೀಠ ತಲೆ ಹಾಕುವುದು ಬೇಡ ಎಂದಿರುವ ಕುಮಾರಸ್ವಾಮಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದು ಈ ವೇಳೆ ‘ಎಚ್.ಡಿ.ಕುಮಾರಸ್ವಾಮಿ ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ. ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
‘ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯ್ತು ಎಂಬುದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿದ್ದರೆ? ಅಂದು ದೇವೇಗೌಡರ ಪರ ಸ್ವಾಮೀಜಿಗಳು ರಸ್ತೆಗೆ ಇಳಿಯಲಿಲ್ಲವೇ? ಸದಾನಂದಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ?’ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ನಾನು ಯಾರ ಬೆಂಬಲವನ್ನೂ ಕೇಳಿರಲಿಲ್ಲ. ಬಾಳೆಹೊನ್ನೂರು ಸ್ವಾಮೀಜಿ, ಶ್ರೀಶೈಲ ಸ್ವಾಮೀಜಿಗಳು ಸೇರಿ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ಜೈನ ಸ್ವಾಮೀಜಿಗಳು ದೊಡ್ಡ ಸಮಾವೇಶದಲ್ಲೇ ನನಗೆ ಆಶೀರ್ವಾದ ಮಾಡಿದ್ದರು. ಅವರು ಪ್ರೀತಿಯಿಂದ ಮಾತಾಡಿದರೆ ಬೇಡ ಎನ್ನಲು ಸಾಧ್ಯವೇ? ನಾನು ಒಂದು ಸಮುದಾಯದಲ್ಲಿ ಹುಟ್ಟಿದ್ದರೂ ಎಲ್ಲಾ ಸಮುದಾಯಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ ಎಂದು ಹೇಳಿದರು.



















