
ಬೆಂಗಳೂರು: ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ (ಪೆಟಾ) ಸ್ವಯಂ ಸೇವಾ ಸಂಸ್ಥೆಯು ಬೆಂಗಳೂರು ಕಂಬಳ ಸಮಿತಿಗೆ ಕಂಬಳ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆಯನ್ನು ಬುಧವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ನಡೆಸಿತು.
ಅ. 26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲಾಗುತ್ತಿಲ್ಲ ಎಂದು ಕಂಬಳ ಸಮಿತಿ ಪರ ವಕೀಲರು ಹೇಳಿದ್ದು ಹೀಗಾಗಿ ಸರಕಾರದ ವಾದ ಮತ್ತು ಅರ್ಜಿದಾರರ ಉಳಿದ ಆಕ್ಷೇಪಗಳನ್ನು ಮುಂದಿನ ವಿಚಾರಣೆ ವೇಳೆ ಅಂದರೆ ನವೆಂಬರ್ 5ಕ್ಕೆ ಪರಿಗಣಿಸಲಾಗುವುದು ಎಂದು ಹೇಳಿ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ರಾಜ್ಯ ಸರಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವುದರಿಂದ ಕೋಣಗಳನ್ನು ಮಂಗಳೂರು – ಉಡುಪಿಯಿಂದ ಬೆಂಗಳೂರಿಗೆ ತರಬೇಕಾಗುತ್ತದೆ. ಇದರಿಂದ ಕೋಣಗಳಿಗೆ ಹಿಂಸೆಯಾಗಲಿದೆ ಎನ್ನುವುದು ಅರ್ಜಿದಾರರ ಆಕ್ಷೇಪವಾಗಿದೆ. ಆದರೆ ಕುದುರೆ ರೇಸ್‌ಗೆ ಬೇರೆ ರಾಜ್ಯಗಳಿಂದ ಕುದುರೆಗಳನ್ನು ತರಲಾಗುತ್ತದೆ.
ಈಗ ಕಂಬಳವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಾತ್ರ ನಡೆಸಬೇಕೇ ಎಂಬ ಪ್ರಶ್ನೆ ನ್ಯಾಯಾಲಯದ ಮುಂದಿದೆ. ಕಂಬಳ ಕ್ರೀಡೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಲ್ಲ. ಅದು ಇಡೀ ಕರ್ನಾಟಕದ ಸಂಸ್ಕೃತಿ. ಅದನ್ನು ಈಗ ಇಡೀ ದೇಶಕ್ಕೆ ಪರಿಚಯಿಸುವ ಸಂದರ್ಭ ಬಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡುವ ವಿಚಾರವನ್ನು ನಮಗೆ ಸರಕಾರ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರಲು ಸಾಧ್ಯವಾಗುತ್ತದೆ. ಬೆಂಗಳೂರು ಬಳಿಕ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸುವ ಬಗ್ಗೆ ಹೇಳಲಾಗುತ್ತಿದೆ. ನವೆಂಬರ್ 9ರಂದು ದಕ್ಷಿಣ ಕನ್ನಡದ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ವೇಳೆ ಉಂಟಾಗುವ ಕೂಗಾಟದಿಂದ ಬೇರೆ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಲಾಗಿದೆ ಎಂದು ವಿವರಿಸಿದರು…
















































