IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಕಲಬುರಗಿ: IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಜೇವರ್ಗಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ IAS ಅಧಿಕಾರಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಸೇರಿದಂತೆ ಇನ್ನಿಬ್ಬರು ಸಾವನ್ನಪ್ಪಿದ್ದಾರೆ.
ನಾಳೆ (ನ.26) ಕಲಬುರಗಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಮಹಾಂತೇಶ ಬೀಳಗಿ ಹಾಗೂ ಅವರ ಸೋದರ ಸಂಬಂಧಿಗಳು ಇನ್ನೋವಾ ಕಾರಿನ ಮೂಲಕ ರಾಮದುರ್ಗದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮಹಾಂತೇಶ್ ಬೀಳಗಿ ತೀವ್ರವಾಗಿ ಗಾಯಗೊಂಡರೆ, ಇನ್ನೋವಾ ಕಾರಿನಲ್ಲಿದ್ದ ಇನ್ನಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಬೀಳಗಿಯನ್ನು ಆಸ್ಪತ್ರೆ ದಾಖಲಿಸಲಿದರೂ ಪ್ರಯೋಜನವಾಗದೆ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಹಾಗೂ ಇತರ ಸಾವರರು ನಜ್ಜು ಗುಜ್ಜಾದ ವಾಹನದಿಂದ ನಾಲ್ವರನ್ನು ಹೊರತೆಗೆದು ಚಿಂತಾಜನಕ ಸ್ಥಿತಿಯಲ್ಲಿದ್ದ ಬೀಳಗಿ ಅವರನ್ನು ತಕ್ಷಣವೇ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಆದರೆ ಪ್ರಯೋಜನವಾಗಲಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಪೊಲೀಸ್ ಕಮೀಷನರ್ ಡಾ. ಶರಣಪ್ಪ ಎಸ್ಡಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ .ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.



















