
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಸಮರ್ಥಿಸಿ ಪ್ರಕಟಣೆ ಬಿಡುಗಡೆ ಮಾಡಿದ್ದು, ‘ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 9.21 ರು.ಗಳಿಂದ 32.98 ರು.ಗೆ ಹಾಗೂ ಡೀಸೆಲ್ ಮೇಲೆ 3.45 ರಿಂದ 31.84 ರು.ಗೆ ಹೆಚ್ಚಳ ಮಾಡಿತ್ತು. ಪರಿಷ್ಕರಣೆ ಹೊರತಾಗಿಯೂ ಈಗಲೂ ಭಾರಿ ಮೊತ್ತದ ತೆರಿಗೆ ಸಂಗ್ರಹಿಸುತ್ತಿದ್ದು, ಇದು ನಿಜವಾಗಿಯೂ ಜನರ ಮೇಲಿನ ಹೊರೆಯಾಗುತ್ತಿದೆ. ಕೇಂದ್ರ ಸರ್ಕಾರದ ಅನರ್ಥ ಆರ್ಥಿಕ ನೀತಿಯಿಂದ ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸುತ್ತಿದೆ. ಕೇಂದ್ರವು ಪೆಟ್ರೋಲ್, ಡೀಸೆಲ್ ಮೇಲಿನ ದುಬಾರಿ ಅಬಕಾರಿ ಸುಂಕದ ಮೂಲಕ ಜನರನ್ನು ಶೋಷಿಸುತ್ತಿದೆ. ಜನಹಿತದ ದೃಷ್ಟಿಯಿಂದ ತಕ್ಷಣ ಈ ತೆರಿಗೆಯನ್ನು ಇಳಿಕೆ ಮಾಡಬೇಕು’ ಎಂದು ಒತ್ತಡ ಹೇರಿದ್ದಾರೆ.
ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ.29.80ಕ್ಕೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.18.44 ರವರೆಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ (ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ 5.12 ರು. ಇದೆ. ಡೀಸೆಲ್ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ.ರಾಜ್ಯದಲ್ಲಿ ಡೀಸೆಲ್ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ತೆರಿಗೆ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.