
ಬೆಂಗಳೂರು: ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ, ಕೆಲಹೊತ್ತಿನಲ್ಲೇ ತಾತ್ಕಾಲಿಕ ತಡೆ ನೀಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯೇಂದ್ರ ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?. ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನೆಲದಲ್ಲಿ ಬದುಕು ನಡೆಸುತ್ತಾ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು’ ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?
ಇಂಡಿಯಾ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ








