
ಚಿಕ್ಕಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಎತ್ತಿನ ಭುಜಕ್ಕೆ ಪ್ರವಾಸಿಗರಿಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಕೆಲವು ತಿಂಗಳ ಹಿಂದೆ ಅರಣ್ಯ ಸಚಿವ ಈಶ್ವರ್ ಕಂಡ್ರೆ ರಾಜ್ಯದ ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಮೂಲಕ ದಿನಕ್ಕೆ ನಿರ್ದಿಷ್ಟ ಪ್ರವಾಸಿಗರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂದು ಸೂಚನೆ ನೀಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಕಳೆದ ಶನಿವಾರದಿಂದ ಸೋಮವಾರದವರೆಗೆ ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಎತ್ತಿನ ಭುಜಕ್ಕೆ ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು ಎತ್ತಿನ ಭುಜದ ಕಿರಿದಾದ ಪ್ರದೇಶದಲ್ಲೂ ಕೂಡ ಪ್ರವಾಸಿಗರು ಟ್ರಕಿಂಗ್ ಹೋಗುತ್ತಿದ್ದು, ಗಾಳಿ ಮಳೆಗೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಈ ಕಾರಣ ಪ್ರವಾಸಿಗರ ಸುರಕ್ಷತೆಯ ಹಿತ ದೃಷ್ಟಿಯಿಂದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿ ಕೆಲಸಗಳು ನಡೆಯಲಿದ್ದು, ಮುಂದಿನ ಆದೇಶದವರೆಗೂ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.