
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾದ ಬಳಿಕ ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ವೇದಿಕೆ ಸಿದ್ಧವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಹೆಚ್ಚಿದೆ.
ಸಂಜೆ 4 ಗಂಟೆಗೆ ನಡೆಯಲಿರುವ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪಕ್ಷದ ಐಕ್ಯತೆ ಪ್ರದರ್ಶಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಸಚಿವರ ಪಟ್ಟಿಯನ್ನು ಇನ್ನೂ ಗೌಪ್ಯವಾಗಿಯೇ ಇಡಲಾಗಿದೆ.
ಪದಗ್ರಹಣ ಸಮಾರಂಭದ ಸ್ಥಳ ಹಾಗೂ ದಿನಾಂಕದ ಕುರಿತು ಅಂತಿಮ ನಿರ್ಧಾರವಾಗಿಲ್ಲ. ಜೂನ್ 5, 6 ಅಥವಾ 7ರಂದು ಪ್ರಮಾಣವಚನ ಸ್ವೀಕಾರಕ್ಕೆ ಶುಭ ಮುಹೂರ್ತವಿದೆ ಎಂದು ಜ್ಯೋತಿಷಿ ದ್ವಾರಕನಾಥ್ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ನಿರೀಕ್ಷೆಯಿಂದ ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಇಂದಿನ ಸಭೆಯ ಬಳಿಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಅಧಿಕೃತವಾಗಿ ಸ್ಪಷ್ಟವಾಗಲಿದೆ.




























