
ಬೆಂಗಳೂರು: ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗಡೆ ಹಾಗೂ ಅವರ ಸಹೋದರ ಕುಟುಂಬದವರ ವಿರುದ್ಧ ದೇವಾಲಯದ ಸುತ್ತಮುತ್ತ ಅಪರಿಚಿತ ಮೃತ ದೇಹಗಳನ್ನು ಹೂತು ಹಾಕಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ಮಧ್ಯಂತರ ನಿರ್ಬಂಧಾಜ್ಞೆ ಜಾರಿಗೊಳಿಸಿದೆ.
ಹೆಗಡೆಯವರು ಈ ಕುರಿತು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಯೂಟ್ಯೂಬರ್ ಎಂ ಡಿ ಸಮೀರ್ ಹಾಗೂ ಕೆಲ ಮಾಧ್ಯಮ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಇದರಲ್ಲಿ ಮೃತ ದೇಹಗಳ ಪ್ರಕರಣದ ಹೆಸರಲ್ಲಿ ತಮ್ಮ ಕುಟುಂಬದ ವಿರುದ್ಧ ಸುಳ್ಳು ಪ್ರಚಾರ, ಅಪಪ್ರಚಾರ ಮತ್ತು ಮಾನಹಾನಿಕಾರಕ ಹೇಳಿಕೆಗಳನ್ನು ನೀಡಬಾರದು ಎಂದು ವಿನಂತಿಸಿ ಮನವಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ 11ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮೂರನೇ ಪಕ್ಷಗಳು ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ, ಪ್ರಕಟಣೆ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳನ್ನು ಮಾಡದಂತೆ ಮಧ್ಯಂತರ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ.



















































