
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದು ಇದೀಗ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಪುತ್ರಿಯೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮಹಿಳೆಯೊಬ್ಬರು ಬಿಎಸ್ವೈ ವಿರುದ್ಧ ದೂರು ನೀಡಿದ್ದು ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಮತ್ತೊಂದೆಡೆ, ದೂರುದಾರ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೇ 27ರಂದು ಮೃತಪಟ್ಟಿದ್ದರು.