
ನವದೆಹಲಿ: ಸಂಸತ್ ಆವರಣದಲ್ಲಿ ಉಭಯ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಳ್ಳಿದ್ದರಿಂದ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕುಸಿದುಬಿದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸದ್ಯ ಪ್ರತಿಭಟನೆ ವೇಳೆ ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನ ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಪಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡು ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.