
ಕರ್ನೂಲ್: ಜಿಲ್ಲೆಯ ಮಂತ್ರಾಲಯ ಸಮೀಪ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (43) ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ರವಿಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೀರ್ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಡಿಕ್ಕಿಯ ರಭಸಕ್ಕೆ ಕಾರು ಕಲ್ವರ್ಟ್‌ಗೆ ಅಪ್ಪಳಿಸಿದ್ದು, ಅಪಘಾತದ ತೀವ್ರತೆಗೆ ರವಿಶೆಟ್ಟಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಘಟನೆ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

















































