
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲದಿರುವುದರಿಂದ ಈ ವಿಚಾರದಲ್ಲಿ ಸಾರ್ವಜನಿಕರು ಮೋಸ ಹೋಗಬೇಡಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಮೋಸ ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಕೆಲವು ಅನಾಮಧೇಯ ವ್ಯಕ್ತಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಹಣವಸೂಲು ಮಾಡುತ್ತಿರುವ ದೂರುಗಳು ಕೇಳಿ ಬರುತ್ತಿದೆ.
ಈ ಕುರಿತು ಪ್ರಸ್ತುತ ಸಾಕ್ಷಾಧಾರಗಳು ಸಹ ಲಭ್ಯವಾಗಿದ್ದು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, ಹಾಗೇನಾದರೂ ಇದ್ದರೆ ಸಕ್ಷಮ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು.
ಸಾರ್ವಜನಿಕರು ಯಾವುದೇ ಆಮಿಷಕ್ಕೆ ಒಳಗಾಗದೆ, ಯಾರಾದರೂ ಮಧ್ಯವರ್ತಿ ತಮ್ಮನ್ನು ನೇಮಕಾತಿ ಕುರಿತು ಸಂಪರ್ಕಿಸಿದಲ್ಲಿ ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡುವಂತೆ ಮನವಿ ಮಾಡಿದ್ದಾರೆ.





















