
ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಆರಂಭವಾಗಿ ಏಪ್ರಿಲ್ 4ರ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳು ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಸುದ್ದಿಗಾರರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ಬಟ್ಟೆ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿದೆ. ಮೆಟಲ್ ವಾಟರ್ ಬಾಟಲ್ ಅಥವಾ ನಾನ್ ಟ್ರಾನ್ಸ್ಪರೆಂಟ್ ವಾಟರ್ ಬಾಟಲ್ ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.