
ಬೆಂಗಳೂರು: ಕೃಷ್ಣನಗರಿ ಉಡುಪಿ ತಾಲೂಕಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮಹಿಳೆಯೊಬ್ಬರನ್ನು ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವಿಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಾಕಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರಿಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುವುದಲ್ಲ ಎಂದು ಹೇಳಿದ್ದಾರೆ.
ಕಳ್ಳತನ, ಮೋಸ, ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಿದ್ದು ದೂರು ದಾಖಲಿಸಿದರೆ ಅವರೇ ತನಿಖೆ ನಡೆಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲು ಸಮರ್ಥವಿರುವಾಗ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದು ಸರ್ಕಾರ ಸಹಿಸುವುದಿಲ್ಲ. ಈ ಘಟನೆ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದಾರೆ.
ಈ ಘಟನೆಯನ್ನು ಖಂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಾಕಿ ಹಲ್ಲೆ ಮಾಡುವುದು ಅಮಾನವೀಯವಾಗಿದೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದು ಪ್ರಕರಣದ ಹಿಂದೆ ಇನ್ನು ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.