
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಏ.17ರ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲಾ ಸೇರಿ ಹಲವು ನಾಯಕರು ಭಾಗವಹಿಸಲಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಂತೆಯೇ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲೂ ಹೋರಾಟ ನಡೆಸಲಿದ್ದು ಅದರ ಸ್ವರೂಪವನ್ನು ಶೀಘ್ರ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಯುಪಿಎ ಸರ್ಕಾರದ ಅವಧಿಯಲ್ಲಿ ಚಿನ್ನದ ಬೆಲೆ 10 ಗ್ರಾಂ.ಗೆ 28 ಸಾವಿರ ರು. ಇತ್ತು. ಈಗ 92 ಸಾವಿರ ರು.ಗೇರಿದೆ. ಜನ ಮದುವೆಗೆ ಮಾಂಗಲ್ಯದ ಸರ ಖರೀದಿಸಲಾಗದ ಸ್ಥಿತಿ ಎದುರಾಗಿದೆ. ಮೊಬೈಲ್, ಟಿವಿ, ವಾಹನ ಸೇರಿ ಎಲೆಕ್ಟ್ರಾನಿಕ್ಸ್ ವಸ್ತುಗಳು, ವಾಹನಗಳ ಬೆಲೆ ದುಪ್ಪಟ್ಟಾಗಿದೆ. ಜತೆಗೆ ಡಾಲರ್ ಮೌಲ್ಯ 59 ರು.ನಿಂದ 89 ರು.ಗೆ ಏರಿಕೆಯಾಗಿದೆ. ಈ ಬೆಲೆಗಳನ್ನು ಕೇಂದ್ರ ಸರ್ಕಾರ ನಿಯಂತ್ರಿಸಬೇಕಲ್ಲವೇ ಎಂದು ಪ್ರಶ್ನಿಸಿದರು.
ನಮ್ಮ ಸರ್ಕಾರ ರೈತರ ಬದುಕು ಉಳಿಸಲು ಹಾಲಿನ ದರ ಏರಿಕೆ ಮಾಡಿದರೆ ಅದರ ಬಗ್ಗೆ ಬಿಜೆಪಿ ಯಾತ್ರೆ ಮಾಡುತ್ತಿದೆ. ಅದೇ ಬಿಜೆಪಿ ಅವರು ಜಾನುವಾರುಗಳ ಬೂಸಾ, ಹಿಂಡಿ ಬೆಲೆ ಇಳಿಸಿಲ್ಲ. ಬಿಜೆಪಿ ಪ್ರತಿಭಟನೆಯ ಬ್ಯಾನರ್‌ನಲ್ಲಿ ನನ್ನ ಮತ್ತು ಸಿದ್ದರಾಮಯ್ಯ ಅವರ ಫೋಟೋ ಹಾಕಿಕೊಂಡಿದ್ದಾರೆ. ಅದರ ಬದಲು ಕೇಂದ್ರ ಬಿಜೆಪಿ ನಾಯಕರ ಫೋಟೋ ಹಾಕಿಕೊಳ್ಳಲಿ. ನಮ್ಮ ಬೆಲೆ ಏರಿಕೆಯ ಬದಲು ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನೂ ಜನರಿಗೆ ತಿಳಿಸಲಿ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.





















