
ಮುದ್ರಾಡಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಹೆಬ್ರಿ :ಭೌತಶಾಸ್ತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ನೋಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಸರ್ ಸಿ. ವಿ. ರಾಮನ್ ವಿಜ್ಞಾನ ಲೋಕಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿಕೊಂಡು ಫೆಬ್ರವರಿ 28 ರಂದು ವಿಜ್ಞಾನ ದಿನಾಚರಣೆಯನ್ನು ಆಚರಿಸುತ್ತೇವೆ. ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನದ ಪಾತ್ರವನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು. ದೈನಂದಿನ ಜೀವನದಲ್ಲಿ ನಾವು ಉಪಯೋಗಿಸುವ ಬಹುತೇಕ ವಸ್ತುಗಳು ವೈಜ್ಞಾನಿಕ ಆವಿಷ್ಕಾರದ ಕೊಡುಗೆಯಾಗಿದೆ. ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ವಿಶೇಷ ಆಸಕ್ತಿ ವಹಿಸಿಕೊಂಡು ಹೊಸ ಹೊಸ ಪ್ರಯೋಗಗಳನ್ನು ಮಾಡುವ ಮೂಲಕ ವೈಚಾರಿಕತೆ ಗುಣವನ್ನು ಬೆಳೆಸಿಕೊಳ್ಳಿ ಎಂದು ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಭಟ್ ಹೇಳಿದರು.
ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ವಿಜ್ಞಾನ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ವಿಜ್ಞಾನ ಸಂಘದ ಮಾರ್ಗದರ್ಶಿ ಶಿಕ್ಷಕಿ ಶ್ಯಾಮಲಾ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಪ್ರತೀಕ್ಷಾ ಕುಲಾಲ್, ಸ್ನೇಹಾ, ಸಜನ್, ಧನ್ವಿ ರಸಪ್ರಶ್ನೆಯಲ್ಲಿ ವಿಜೇತರಾಗಿ ಬಹುಮಾನ ಪಡೆದುಕೊಂಡರು. ಶಿಕ್ಷಕರಾದ ಪಿ. ವಿ. ಆನಂದ, ರಘುಪತಿ ಹೆಬ್ಬಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಮಹೇಶ್ ನಾಯ್ಕ್ ವಂದಿಸಿದರು.






