ಸೋಮವಾರವೇ ಡಿಕೆ ಶಿವಕುಮಾರ್ ಸರ್ಕಾರ ಪ್ರಮಾಣವಚನ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಕಾಂಗ್ರೆಸ್‌ನ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ.
ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಪಕ್ಷ ಅಧಿಕೃತವಾಗಿ ಘೋಷಿಸದಿದ್ದರೂ, ಡಿಕೆ ಶಿವಕುಮಾರ್ ನೇತೃತ್ವ ವಹಿಸುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಹೊಸ ಸರ್ಕಾರದ ಪ್ರಮಾಣವಚನ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಆದರೆ ಡಿಕೆ ಶಿವಕುಮಾರ್ ಜ್ಯೋತಿಷಿಗಳ ಜೊತೆ ಚರ್ಚಿಸಿ ಶುಭ ಮುಹೂರ್ತದ ಹುಡುಕಾಟದಲ್ಲಿದ್ದಾರೆ ಎನ್ನಲಾಗಿದೆ.
ಸೋಮವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ನೂತನ ಸರ್ಕಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಂಪುಟ ರಚನೆ ಕುರಿತು ಅಂತಿಮ ನಿರ್ಧಾರ ದೆಹಲಿ ಸಭೆಯ ಬಳಿಕ ಹೊರಬೀಳಲಿದೆ.
ಪ್ರಮಾಣವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.




























