
ಕೊಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಪ್ರತಿಕ್ರಿಯಿಸಿ “ರಾತ್ರಿ ವೇಳೆ ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು” ಎಂದು ಹೇಳಿಕೆ ನೀಡಿದ್ದು ಇದು ರಾಜಕೀಯ ಹಾಗೂ ಸಾಮಾಜಿಕ ವಲಯಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಹೇಳಿಕೆಯು ಮಹಿಳಾ ಹಕ್ಕು ಸಂಘಟನೆಗಳು ಮತ್ತು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದು ಸಂತ್ರಸ್ತರನ್ನೆ ಆರೋಪಿಸುವ ಮನೋಭಾವ ಎಂದು ಟೀಕಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಮಮತಾ ಬ್ಯಾನರ್ಜಿ ನಾವು ಇಂತಹ ಅಪರಾಧಗಳಿಗೆ ಶೂನ್ಯ ಸಹಿಷ್ಣತೆಯ ನಿಲುವು ಹೊಂದಿದ್ದೇವೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಪತ್ತೆಹಚ್ಚಲು ಶೋಧಕಾರ್ಯ ಮುಂದುವರೆದಿದೆ. ಯಾರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಘಟನೆ ಹಿನ್ನೆಲೆ:
ಶುಕ್ರವಾರ ಸಂಜೆ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಹಿಂಬಾಗದ ಪ್ರದೇಶದಲ್ಲಿ 23 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.
ಪೊಲೀಸರು ಮೂವರನ್ನು ಬಂಧಿಸಿದ್ದು ಮತ್ತೊಬ್ಬನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನು ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಪತ್ತೆಹಚ್ಚಲಾಗಿದೆ. ಅಪರಾಧದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ತೆಯ ತಂದೆ ‘ನಮ್ಮ ಮಗಳು ಸುರಕ್ಷಿತಳಲ್ಲ ಎಂದು ನಮಗೆ ಭಾಸವಾಗಿದೆ. ಅವಳನ್ನು ಒಡಿಶಾ ಗೆ ಕರೆದುಕೊಂಡು ಹೋಗಿ ಅಲ್ಲಿ ಶಿಕ್ಷಣ ಮುಂದುವರೆಸುತ್ತೇವೆ’ ಎಂದು ತಿಳಿಸಿದ್ದಾರೆ.






















































