
ಬೆಂಗಳೂರು: ನಗರದ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆ ನಡೆದಿದೆ.
ಕೃತಿ ಕುಮಾರಿ(24) ಎಂಬ ಬಿಹಾರ ಮೂಲದ ಯುವತಿಯು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ರಾತ್ರಿ 11:10ರ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದು ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಹಾಗೂ ಕೋರಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದ್ದು ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.











