
ಬೆಂಗಳೂರು: ಎಸ್‌ಐಟಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹೈದರಾಬಾದ್ ಗ್ಯಾಂಗ್‌ನಿಂದ 8.21 ಕೋಟಿ ರು. ನಗದು ಹಣ ಜಪ್ತಿ ಮಾಡಿದ ಬೆನ್ನಲ್ಲೇ ಇದೀಗ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನ ಬಳಿ 3.62 ಕೋಟಿ ರು. ನಗದು ಹಣ ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು ವಿಚಾರಣೆ ವೇಳೆ ಆತ ನೀಡಿದ ಮಾಹಿತಿ ಮೇರೆಗೆ 3.62 ಕೋಟಿ ರು. ಹಣ ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಈವರೆಗೆ ಎಸ್ಐಟಿ ಅಧಿಕಾರಿಗಳು ಒಟ್ಟು ಸುಮಾರು 11.83 ಕೋಟಿ ರು. ನಗದು ಜಪ್ತಿ ಮಾಡಿದಂತಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಣ ಲೂಟಿಯಾಗಿದ್ದು, ಇಂತಹ ಪ್ರಕರಣವನ್ನು ಬೇರು ಸಮೇತ ಕಿತ್ತುಹಾಕಬೇಕು. ಈ ರೀತಿಯ ಮೊಕದ್ದಮೆಯನ್ನು ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಂಡರೆ ಬೆಳೆಯುತ್ತಿರುವ ಭ್ರಷ್ಟಾಚಾರವನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.