
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ-ಸಂವಿಧಾನ ಕುರಿತು ತಾವು ನೀಡಿದ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಂವಿಧಾನ ಬದಲಾವಣೆ ಕುರಿತು ನಾನು ಎಲ್ಲೂ ಹೇಳಿಲ್ಲ. ಬಿಜೆಪಿ ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದು, ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
36 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂಥ ವಿಚಾರದಲ್ಲಿ ನಾನು ಬಿಜೆಪಿಯ ಜೆ.ಪಿ.ನಡ್ಡಾ ಅವರಿಗಿಂತಲೂ ಸೂಕ್ಷ್ಮ ರಾಜಕಾರಣಿ. ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರು ಎಳೆದು ತರಲಾಗುತ್ತಿದೆ. ನ್ಯಾಯಾಲಯಗಳ ತೀರ್ಪಿನ ಅನುಸಾರ ಸಂವಿಧಾನಕ್ಕೆ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆ. ಅದರ ಹೊರತು, ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ. ನನ್ನ ಹೇಳಿಕೆ ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಸಂವಿಧಾನವನ್ನು ಜಾರಿಗೆ ತಂದಿದ್ದೇ ಕಾಂಗ್ರೆಸ್ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೇ ಚೆನ್ನಾಗಿ ತಿಳಿದಿದೆ ಎಂದು ಸ್ಪಷ್ಟಪಡಿಸಿದರು.