
ಬೆಂಗಳೂರು/ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಕೇವಲ ಎರಡು ದಿನಗಳ ಹಿಂದಷ್ಟೇ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಹೊರಟ್ಟಿ, ತಮ್ಮ ಮೇಲೆ ಯಾವುದೇ ರಾಜಕೀಯ ಒತ್ತಡ ಇಲ್ಲ. ಸಭಾಪತಿ ಸ್ಥಾನ ತೊರೆಯುವಂತೆ ಯಾರೂ ಒತ್ತಾಯಿಸಿಲ್ಲ ಎಂದು ಅವರು ತಿಳಿಸಿದ್ದರು.
ಅದೇ ವೇಳೆ, ನಾನು ಕುರ್ಚಿಗೆ ಅಂಟಿಕೊಂಡಿಲ್ಲ ಸರ್ಕಾರ ಸೂಚಿಸಿದರೆ ತಕ್ಷಣ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧ. ಅವಿಶ್ವಾಸ ನಿರ್ಣಯಕ್ಕಾಗಿ ಕಾಯುವ ಅಗತ್ಯವಿಲ್ಲ ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡವಿದ್ದರೆ ನನ್ನನ್ನು ಬದಲಾವಣೆ ಮಾಡಬಹುದು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು.
ಆದರೆ, ಈಗ ದಿಢೀರ್ ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಧಾನ ಪರಿಷತ್ತಿನ ಬದಲಾದ ಸಂಖ್ಯಾಬಲದ ಹಿನ್ನೆಲೆಯಲ್ಲಿ ಮುಂದಿನ ಸಭಾಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಜೋರಾಗಿದ್ದು, ರಾಜೀನಾಮೆ ಅಂಗೀಕಾರವಾದ ಬಳಿಕ ಮುಂದಿನ ಪ್ರಕ್ರಿಯೆಗಳು ನಡೆಯಲಿದೆ.























































