
ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಹೇಳಿದ್ದಾರೆ.
ಕಳೆದ ವಾರ ರಾಜ್ಯದ ಹಲವು ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ನಡೆದಿದ್ದು ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿ ಆಡಳಿತ, ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಕೆಲ ಸಚಿವರು ಸಂತ್ರಸ್ತ ವಿದ್ಯಾರ್ಥಿಗಳ ಮನೆಗೆ ತೆರಳಿ ನೆರವಿನ ಭರವಸೆಯನ್ನೂ ನೀಡಿದ್ದರು. ಜೊತೆಗೆ ಬ್ರಾಹ್ಮಣ ಸಮುದಾಯ ಬೀದಿಗಿಳಿದು ಹೋರಾಟ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು.
ಇದೀಗ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ‘ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಆಗಲಿದೆ’ ಎಂದು ಭರವಸೆ ನೀಡಿದ್ದಾರೆ.




