
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಂದ ಮಾಹಿತಿ ಪಡೆದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿ ಗುರುವಾರ ರಾತ್ರಿ 8.30ರ ಸುಮಾರಿಗೆ ಕೊಲೆ ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಆಗಲಿದ್ದು ಆರೋಪಿಗಳ ಬಂಧನಕ್ಕೆ 4 ತಂಡ ರಚನೆ ಮಾಡಿದ್ದೇವೆ. ಮಂಗಳೂರು ಜನ ಶಾಂತಿ ಕಾಪಾಡಬೇಕು. ಸರ್ಕಾರ ನಿಮ್ಮ ಜೊತೆ ಇರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಗೆ ತಿಳಿಸಿದ್ದೇವೆ. ತನಿಖೆ ಮುಂದುವರಿದಿದೆ. ಯಾರೇ ಆಗಿದ್ದರೂ ಕಠಿಣ ಕ್ರಮ ಆಗಲಿದೆ. ಯಾವುದೇ ಪಕ್ಷದವರಾಗಿದ್ದರೂ ಕೊಲೆ ಆರೋಪಿಗಳನ್ನು ಬಿಡುವುದಿಲ್ಲ ಎಂದು ಹೇಳಿದರು.





