
ಬೆಂಗಳೂರು: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ಸೂಕ್ತ ಕ್ರಮ ವಹಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ. ಕಾಡಿನಲ್ಲಿ ದೊಡ್ಡ ಸಂಖ್ಯೆಯ ಸಾಕುಪ್ರಾಣಿಗಳು ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗಲಿದ್ದು ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿದ್ದು ಹೀಗಾಗಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತಿಯ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.