
ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ (ಆ.07) ಮಧ್ಯಾಹ್ನ ನಡೆದ ಬೆಚ್ಚಿಬೀಳಿಸುವ ಘಟನೆಯಲ್ಲಿ ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55) ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಮುದರಂಗಡಿ ಪೇಟೆಯಲ್ಲಿರುವ ಅವರ ಕಚೇರಿ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅತಿ ಸಮೀಪದಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಹಣೆಗೆ ಹಾಗೂ ಎರಡು ಗುಂಡುಗಳು ಕೆನ್ನೆಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮೊದಲು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿ, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪಡುಬಿದ್ರೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಂ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯಾಚರಣೆಗೆ ಸೂಚನೆ ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹತ್ಯೆಯ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

























































