
ಬೆಂಗಳೂರು: ರಾಜ್ಯ ಸರ್ಕಾರವು ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ನಿಗದಿಪಡಿಸುವ ನಿಟ್ಟಿನಲ್ಲಿ ನಿಯಮ ಜಾರಿಗೆ ತಂದಿದ್ದು ಇದೀಗ ಹೈಕೋರ್ಟ್ ಈ ನಿಯಮಕ್ಕೆ ಮಂಗಳವಾರ ಮಧ್ಯಂತರ ತಡೆ ನೀಡಿದೆ.
ರಾಜ್ಯ ಸರ್ಕಾರದ ಏಕರೂಪ ದರ ನಿಗದಿಯನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಪಿವಿಆರ್ ಐನಾಕ್ಸ್ ಲಿಮಿಟೆಡ್, ಕೀಸ್ಟೋನ್ ಎಂಟರ್ಟೈನ್ಮೆಂಟ್, ವಿಕೆ ಫಿಲಂಸ್ ಮತ್ತು ಸಿನಿ ಫ್ಲೆಕ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕ ಸದಸ್ಯ ನ್ಯಾಯ ಪೀಠವು ನಡೆಸಿ ಆದೇಶವನ್ನು ಕಾಯ್ದಿರಿಸಿದೆ.






















































