
ದಕ್ಷಿಣ ಕನ್ನಡ: ಏಪ್ರಿಲ್ 21ರಿಂದ 23ರವರೆಗೆ ಜಿಲ್ಲೆಯಲ್ಲಿ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಮುಂದಿನ ಕೆಲವು ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಕರಾವಳಿ ಭಾಗಗಳಾದ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡಬಿದಿರೆ, ಪುತ್ತೂರು ಹಾಗೂ ಕಡಬ ಪ್ರದೇಶಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಅನುಭವವಾಗಲಿದ್ದು, ದಿನದ ಹೊತ್ತಿನಲ್ಲಿ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ, ಹೆಬ್ರಿ ಮತ್ತು ಕಾರ್ಕಳ ತಾಲ್ಲೂಕುಗಳಲ್ಲೂ ತಾಪಮಾನ ಏರಿಕೆಯಾಗುವ ಸಾಧ್ಯತೆ ಇರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣ ಕೇಂದ್ರ ಮುನ್ಸೂಚನೆ ನೀಡಿದ್ದು, ಕಳೆದ ಕೆಲವು ದಿನಗಳಿಂದಲೇ ಹಲವು ಕಡೆ 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಉಷ್ಣಾಂಶ ದಾಖಲಾಗುತ್ತಿರುವುದು ಗಮನಾರ್ಹವಾಗಿದೆ.
ಈ ರೀತಿಯ ತಾಪಮಾನ ಏರಿಕೆಯಿಂದಾಗಿ ಕೆಲವೆಡೆ ಬಿಸಿಗಾಳಿ ಪರಿಸ್ಥಿತಿ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಅನಾವಶ್ಯಕವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಸಲಹೆ ನೀಡಿದ್ದಾರೆ.













