
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕದ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಏಪ್ರಿಲ್ 9 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಪರೀಕ್ಷಾ ಮಂಡಳಿ ಅಧಿಕಾರಿಗಳು ಈ ಮಾಹಿತಿ ನೀಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ತಮ್ಮ ಫಲಿತಾಂಶ ಪರಿಶೀಲಿಸಬಹುದು.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ಪರೀಕ್ಷೆಗೆ ಸುಮಾರು 7.1 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು.
ಮೌಲ್ಯಮಾಪನ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿರುವುದರಿಂದ ಫಲಿತಾಂಶ ಪ್ರಕಟಣೆ ತಡವಾಗಿತ್ತು. ಈಗ ಏಪ್ರಿಲ್ 9ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.









