
ವಿಧಾನ ಪರಿಷತ್: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕನ್ನಡ ಭಾಷಾ ಕಲಿಕೆ ಅಧಿನಿಯಮದಡಿ ಕನ್ನಡ ಕಲಿಸುತ್ತಿಲ್ಲ ಎಂಬ ದೂರು ಬಂದರೆ ಅಂತಹ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೋಂದಣಿ ಮಾಡುವಾಗ ಕನ್ನಡ ಭಾಷಾ ಕಲಿಕೆ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಲು ಜಾರಿಗೆ ತಂದಿರುವ ನಿಯಮ ಪಾಲನೆ ಮಾಡದ ಬಗ್ಗೆ ದೂರುಗಳು ಬಂದರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಸಂಬಂಧ ಬೆಂಗಳೂರಿನ ಆನೇಕಲ್‌ನ ದೊಮ್ಮಸಂದ್ರದ ದಿ.ಬೆಂಗಳೂರು ಇಂಟರ್ ನ್ಯಾಷನಲ್ ಶಾಲೆ, ಗೇರ್ ಇನ್ನೋವೆಟಿವ್ ಶಾಲೆಗಳಿಗೆ ಈಗಾಗಲೇ ದಂಡ ವಿಧಿಸಲಾಗಿದೆ ಎಂದು ಹೇಳಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಅಡಿ 2024-25ನೇ ಸಾಲಿನಲ್ಲಿ 3,413 ಹಾಗೂ 2025-26ನೇ ಸಾಲಿನಲ್ಲಿ 2,509 ಮಕ್ಕಳು ಪ್ರವೇಶಾತಿ ಪಡೆದಿದ್ದಾರೆ. ಪೋಷಕರು ವಾಸಿಸುವ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಇಲ್ಲದೇ ಇದ್ದಾಗ ಅಥವಾ ಸೀಟು ಸಿಗದೇ ಇದ್ದಾಗ ಆರ್‌ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಸೇರಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಮಕ್ಕಳ ಸೇರ್ಪಡೆ ಸಂಖ್ಯೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.





