
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುವ ಹಿಂದಿನ ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಿ. ಕ್ಯಾನ್ಸರ್‌ಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ತಿಳಿಯಲು ಸೂಕ್ತ ಅಧ್ಯಯನ ನಡೆಸುವ ಅಗತ್ಯವಿದೆ. ಸಮಗ್ರ ಅಧ್ಯಯನ ನಡೆಸಿ ವರದಿ ಬಂದ ಬಳಿಕ ಕ್ಯಾನ್ಸರ್ ಪ್ರಕರಣಗಳ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಿ. ಕ್ಯಾನ್ಸರ್ ಚಿಕಿತ್ಸೆಗಾಗಿ ನಮ್ಮ ರಾಜ್ಯದ ಜನ ಬೇರೆ ರಾಜ್ಯ, ದೇಶಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗಬಾರದು. ರಾಜ್ಯದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ವಹಿಸಿ ಎಂದು ಸಲಹೆ ನೀಡಿದರು.
2023-24ನೇ ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು. ಗದಗ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಸಾಮರ್ಥದ ಆಸ್ಪತ್ರೆಗಳ ನಿರ್ಮಾಣವನ್ನು ತರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.



















