
ಕಾರ್ಕಳ: ಮೇ 24ರಂದು ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ (ರಿ.) ಮತ್ತು ಕರ್ನಾಟಕ ಜೈ ಭೀಮ್ ಯುವ ಸೇನೆ (ರಿ.) ವತಿಯಿಂದ ದ್ವಿತೀಯ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಕಳದ ಪತ್ರಿಕಾ ಭವನದಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ರಾಜ್ಯಾಧ್ಯಕ್ಷ ಅಶೋಕ್ ಕುಮಾರ್ ಕುಂಟಲ್ಪಾಡಿ ಈ ಕಾರ್ಯಕ್ರಮದಲ್ಲಿ ಪ.ಜಾತಿ ಪಂಗಡಕ್ಕೆ ಸೇರಿದ 1ರಿಂದ 10ನೇ ತರಗತಿವರೆಗೆ ಅಭ್ಯಾಸ ಮಾಡುತ್ತಿರುವ ಸುಮಾರು 2000 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಸೇರಿದಂತೆ ಅಗತ್ಯವಾದ ಶಿಕ್ಷಣ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ, ಶಾಸಕ ವಿ. ಸುನಿಲ್ ಕುಮಾರ್, ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್, ನವೋದಯ ಚಾರಿಟೇಬಲ್ ಟ್ರಸ್ಟ್ ಪ್ರತಿನಿಧಿಗಳು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಮತ್ತು ಇನಾಯತ್ ಆಲಿ, ಉದ್ಯಮಿ ರಾಮಕೃಷ್ಣ ಆಚಾರ್ಯ ಸೇರಿದಂತೆ ಅನೇಕರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಸಮುದಾಯವು ಸಾಮಾಜಿಕವಾಗಿ ಹಿಂದುಳಿದಿರುವುದರಿಂದ, ಎಲ್ಲರೂ ಒಂದಾಗಿ ಕೆಲಸ ಮಾಡಿ ಅದನ್ನು ಅಭಿವೃದ್ಧಿಯ ದಿಕ್ಕಿನಲ್ಲಿ ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಮತ್ತು ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಬೇಕು ಎಂಬುದನ್ನೂ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಲೋಕೇಶ್ ಎಂ.ಎಸ್. ಮೂಡುಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷ ರಮೇಶ್ ಕಾರ್ಕಳ, ಮಹಿಳಾ ವಿಭಾಗದ ಅಧ್ಯಕ್ಷೆ ಶಾಂತಿ ನಿಟ್ಟೆ, ಮಹಿಳಾ ಕಾರ್ಯದರ್ಶಿ ಶಾಲಿನಿ ಅಂಡಾರು, ಕಾರ್ಯದರ್ಶಿ ಪ್ರೇಮ, ಸಂಘಟನಾ ಕಾರ್ಯದರ್ಶಿ ನವೀನ್ ನಿಟ್ಟೆ, ತಾಲೂಕು ಅಧ್ಯಕ್ಷ ಸುನಿಲ್ ನಿಂಜೂರು, ಹೆಬ್ರಿ ತಾಲೂಕು ಅಧ್ಯಕ್ಷ ರಮೇಶ್ ಅಜೆಕಾರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಆರ್. ಮೂಡುಬಿದ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.



















