ತಹಶೀಲ್ದಾರ್ ಸ್ಥಳ ಪರಿಶೀಲನೆ: 8 ಮಂದಿಯ ಸ್ಥಳಾಂತರ

ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದೆ.
ರೆಂಜಾಳ ಗ್ರಾಮದ ಪೇರಲ್ದ ಬೆಟ್ಟು ನಿವಾಸಿಗಳಾದ ಹೇಡ್ಮೆ ಹರಿಪ್ರಸಾದ್ ಹಾಗೂ ಸುಮಿತ್ರಾ ಎಂಬವರ ಮನೆಯ ಸಮೀಪ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ 2 ಕುಟುಂಬದ 8 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್. ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಸಂಬಂಧಿತ ಅಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಆಡಳಿತವು ಮಳೆ ಪೀಡಿತ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಲು ಹಾಗೂ ಅಗತ್ಯವಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ.























































