
ಕಾರ್ಕಳ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪಿಯೊಬ್ಬನ ವಿರುದ್ಧ ಕಠಿಣ ಪಿ.ಐ.ಟಿ.ಎನ್.ಡಿ.ಪಿ.ಎಸ್ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ.
ಬಂಧನಕ್ಕೊಳಗಾದವನನ್ನು ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಮಹಮ್ಮದ್ ಪೈಝಲ್ (22) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಉಳಿದ ಪ್ರಕರಣಗಳಲ್ಲಿ ಎರಡು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಒಂದು ಪ್ರಕರಣ ತನಿಖೆ ಹಂತದಲ್ಲಿದೆ.
ಆರೋಪಿಯ ನಿರಂತರ ಅಪರಾಧ ಚಟುವಟಿಕೆಗಳನ್ನು ಗಮನಿಸಿದ ಕಾರ್ಕಳ ನಗರ ಠಾಣೆ ಪೊಲೀಸರು ವರದಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಿಫಾರಸ್ಸು ಮಾಡಿದ್ದು, ಮಂಗಳೂರು ಪಶ್ಚಿಮ ವಲಯ ಐಜಿಪಿ ಏಪ್ರಿಲ್ 7 ರಂದು ಬಂಧನ ಆದೇಶ ಹೊರಡಿಸಿದ್ದಾರೆ.
ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿ, ಮುಂದಿನ ಕ್ರಮವಾಗಿ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲು ಸಿದ್ಧತೆ ನಡೆಸುತ್ತಿದ್ದಾರೆ.









