
ಬೆಂಗಳೂರು: 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಂವಿಧಾನದಲ್ಲಿ ಉಲ್ಲೇಖಿಸಿರುವ ಒಕ್ಕೂಟ ಆಡಳಿತ ವ್ಯವಸ್ಥೆಯನ್ನು ಪಾಲಿಸಬೇಕಾದ ಕೇಂದ್ರ ಸರ್ಕಾರವೇ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 17ನೇ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಕಲ್ಯಾಣ ಯೋಜನೆಗಳ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ದೀರ್ಘಾವಧಿಯ ಆರ್ಥಿಕ ಪರಿವರ್ತನೆಯಲ್ಲಿ ಹೂಡಿಕೆಗಳೊಂದಿಗೆ ಸಮತೋಲನಗೊಳಿಸುವ ಅಭಿವೃದ್ಧಿ ಕಾರ್ಯತಂತ್ರವನ್ನು ಅನುಸರಿಸುತ್ತಿದೆ ಎಂದು ತಿಳಿಸಿದರು. ಜೊತೆಗೆ ರಾಜ್ಯದ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಹೆಚ್ಚು ಸಂವೇದನಾಶೀಲವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕವು ಅಭಿವೃದ್ಧಿಯಲ್ಲಿ ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದು, ರಾಷ್ಟ್ರದ ತೆರಿಗೆ ಆದಾಯಕ್ಕೂ ಮಹತ್ತರ ಕೊಡುಗೆ ನೀಡುವ ರಾಜ್ಯಗಳಲ್ಲೊಂದು ಎಂದು ಸಿಎಂ ಸಿದ್ದರಾಮಯ್ಯ ಒತ್ತಿ ಹೇಳಿದರು.






