
ಬೆಂಗಳೂರು: 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಗೆ ಸ್ಪಷ್ಟಪಡಿಸಿದ್ದಾರೆ.
ಇಂದು ಹೈಕೋರ್ಟ್ ಈ ಅರ್ಜಿಯನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿದ್ದು ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದಾಗ, ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸ್ಪಷ್ಟಪಡಿಸಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು ಎಂದು ಮಾಹಿತಿ ನೀಡಿದರು.
ಸರ್ಕಾರದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಈ ಹೇಳಿಕೆಯನ್ನು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.













