ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ : ಡಿಕೆ ಶಿವಕುಮಾರ್

ಬೆಂಗಳೂರು: ಶನಿವಾರ ಕಾಂಗ್ರೆಸ್ ಪಕ್ಷವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಹೆಸರು ಬದಲು ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ‘ಸತ್ಯಮೇವ ಜಯತೆ’ ಘೋಷವಾಕ್ಯದಡಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು ಈ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಐತಿಹಾಸಿಕ ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದರು. ಈಗ ಬಿಜೆಪಿಯವರು ಗಾಂಧೀಜಿಯವರ ಹೆಸರನ್ನು ತೆಗೆಯುತ್ತಿದ್ದಾರೆ. ಬಿಜೆಪಿಯವರಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ ಎಂದು ಸವಾಲೆಸೆದಿದ್ದಾರೆ.





