
ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಲು ಸರ್ಕಾರ ನಿರ್ಧರಿಸಿದೆ. ಮೇ 24ರಂದು ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಅರ್ಹರಿಗೆ ಮಾತ್ರ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಮೃತರ ಹೆಸರಿನಲ್ಲಿಯೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು, ತೆರಿಗೆ ಪಾವತಿದಾರರು ಯೋಜನೆಗಳ ಲಾಭ ಪಡೆಯುತ್ತಿರುವುದು ಹಾಗೂ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಫಲಾನುಭವಿಗಳಾಗಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಇಂತಹ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಪರಿಶೀಲನೆ ನಡೆಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಫಲಾನುಭವಿಗಳ ಪಟ್ಟಿಯ ಸಮಗ್ರ ಪರಿಷ್ಕರಣೆ ನಡೆಯಲಿದ್ದು, ಹೊಸ ಮಾರ್ಗಸೂಚಿಗಳ ಆಧಾರದಲ್ಲಿ ಅರ್ಹರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ರಾಜ್ಯದಲ್ಲಿ ಪ್ರಸ್ತುತ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ.




























