
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಪರಿಷ್ಕರಣೆಗೆ ಮುಂದಾಗಿದೆ. ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಿ, ಯೋಜನೆಯ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಫಲಾನುಭವಿಯ ಸ್ವಂತ ಮೊಬೈಲ್ ಸಂಖ್ಯೆ ಹಾಗೂ ಅವರ ಹೆಸರಿನ ಬ್ಯಾಂಕ್ ಖಾತೆ ಕಡ್ಡಾಯವಾಗಿರಲಿದೆ ಎಂದು ತಿಳಿಸಿದರು. ಗಂಡ, ಮಕ್ಕಳು ಅಥವಾ ಇತರರ ಖಾತೆಗೆ ಹಣ ಜಮೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸರ್ಕಾರದ ನೆರವು ನೇರವಾಗಿ ಮಹಿಳೆಯರ ಖಾತೆಗೆ ತಲುಪಬೇಕು ಎಂಬ ಉದ್ದೇಶವಿದೆ ಎಂದರು.
ಫಲಾನುಭವಿಗಳ ಮಾಹಿತಿ ಪರಿಶೀಲನೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ಕಾರ್ಯಕ್ಕೆ 20 ಕೋಟಿ ರೂ. ಮೀಸಲಿಡಲಾಗಿದೆ. ಯೋಜನೆಯಿಂದ ಅರ್ಹರನ್ನು ಕೈಬಿಡುವ ಉದ್ದೇಶ ಸರ್ಕಾರಕ್ಕಿಲ್ಲ. ನಿಜವಾದ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಹಣ ತಲುಪುವ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
‘ಆಪರೇಷನ್ ಗೃಹಲಕ್ಷ್ಮಿ’ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದು, ಮೃತಪಟ್ಟವರು ಸೇರಿದಂತೆ ಸುಮಾರು 4.30 ಲಕ್ಷ ಅನರ್ಹರ ಹೆಸರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ.

















































