
ನೆಲಮಂಗಲ: ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ರಸ್ತೆಯಲ್ಲಿ ಬರುವಾಗ ಚಾಲಕ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ.