
ಬೆಂಗಳೂರು: ಆರೋಗ್ಯ ಇಲಾಖೆ ಹೊಸ ಆದೇಶ ಹೊರಡಿಸಿದ್ದು ಅದೇನೆಂದರೆ ರಾಜ್ಯದ ಆರೋಗ್ಯ ಇಲಾಖೆ ವಿವಿಧ ಕಚೇರಿ, ಆಸ್ಪತ್ರೆಗಳಲ್ಲಿ ಬಳಸುತ್ತಿರುವ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಹಾರ್ಡ್‌ವೇರ್, ನೆಟ್‌ವರ್ಕ್ ಸಮಸ್ಯೆ ಆಗುತ್ತಿರುವುದರಿಂದ ಇಲಾಖೆ ವ್ಯಾಪ್ತಿಯಲ್ಲಿ ಜು.1ರಿಂದ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿದೆ.
ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಹಾರ್ಡ್‌ವೇರ್ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ, ಬದಲಾವಣೆಯ ಅಗತ್ಯವಿದ್ದು ಇದು ಅನಗತ್ಯ ವೆಚ್ಚಗಳಿಗೆ ಕಾರಣವಾಗುತ್ತಿದೆ. ಜತೆಗೆ ಬಯೋಮೆಟ್ರಿಕ್ ಸಾಧನಗಳು ನಿರ್ದಿಷ್ಟ ಸ್ಥಳಗಳಿಗೆ ಸೀಮಿತವಾಗಿದೆ. ಕ್ಷೇತ್ರ ಸಿಬ್ಬಂದಿ ಮತ್ತು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಬಜೆಟ್‌ನಲ್ಲಿ ತಿಳಿಸಿರುವಂತೆ ಕರ್ನಾಟಕದ ಎಲ್ಲಾ 12,000 ಆರೋಗ್ಯ ಸಂಸ್ಥೆಗಳನ್ನು ಆರೋಗ್ಯ ಇಲಾಖೆಯಾದ್ಯಂತ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ ಅನುಷ್ಠಾನಗೊಳಿಸಲು ಪ್ರಸ್ತಾಪಿಸಲಾಗಿದೆ. ನಿರ್ವಹಣಾ ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸಬೇಕು. ಜು.1 ಮೊಬೈಲ್ ಹಾಜರಾತಿ ಕಡ್ಡಾಯವಾಗಿ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.