
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಣುಕಾಸ್ವಾಮಿಯ ಕೊಲೆ ಆರೋಪದಡಿ ಜೈಲು ಸೇರಿರುವ ನಟ ದರ್ಶನ್‌ಗೆ ವಿಶೇಷ ಆತಿಥ್ಯ ಕೊಟ್ಟ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರದಲ್ಲಿ ಯಾರಿಗೂ ಕ್ಷಮೆ ಇಲ್ಲ. ಸಾರ್ವಜನಿಕವಾಗಿ ತಪ್ಪು ಸಂದೇಶ ಹೋಗುತ್ತದೆ. ಮೊದಲು ಕ್ರಮ ಕೈಗೊಂಡು ಅನಂತರ ವಿವರಣೆ ಕೊಡಿ ಎಂದು ತಾಕೀತು ಮಾಡಿದ ಸಿಎಂ ಕೂಡಲೇ ದರ್ಶನ್ ಹಾಗೂ ಜತೆಗಿರುವವರನ್ನು ಬೇರೆ ಕಾರಾಗೃಹಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.18 ಕೈದಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸ್ಥಳಾಂತರಿಸಲು ಕ್ರಮ ಕೈಗೊಂಡಿದ್ದು ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಕಳುಹಿಸಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
“ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಸಮ್ಮುಖದಲ್ಲಿಯೇ ಇಲಾಖೆಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು













