
ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗುಂಪು ಘರ್ಷಣೆ ವಿಷಯದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದು ಆಕಸ್ಮಿಕ ಘಟನೆ ಎಂದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಕಸ್ಮಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಗಲಭೆಯ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ಸುನಿಲ್ ಕುಮಾರ್ ಸೇರಿದಂತೆ ಹಲವರು ಸರ್ಕಾರದ ವೈಫಲ್ಯವೇ ಕಾರಣ ಎಂದು ಟೀಕಿಸಿದ್ದಾರೆ.
ಶಾಸಕ ಸುನಿಲ್ ಕುಮಾರ್ ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ, ಪೋಸ್ಟ್ ಹಂಚಿಕೊಂಡಿದ್ದು ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ವೇಳೆ ಉದ್ದೇಶಪೂರ್ವಕವಾಗಿಯೇ ಸಮುದಾಯವೊಂದು ದಾಂಧಲೆ ನಡೆಸಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿಂದುಗಳನ್ನು ಗುರಿಯಾಗಿಸಿ, ಹಿಂದುಗಳ ಆಚರಣೆಗೆ ಅಡ್ಡಿಪಡಿಸಲಾಗುತ್ತಿದೆ. ಘಟನೆಯ ಹೊಣೆಯನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಹೊರಬೇಕು ಎಂದು ಕಿಡಿಕಾರಿದ್ದಾರೆ.































































































































