
ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯದಲ್ಲಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತರಾಗಿದ್ದಾರೆ.
ಗುರುವಾರ ರಾತ್ರಿ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಅವರು, ನಂತರ ಗರ್ಭಿಣಿ ನೀರಾನೆಯ ಆರೋಗ್ಯ ಪರಿಶೀಲನೆಗಾಗಿ ಅದರ ಆವರಣಕ್ಕೆ ಪ್ರವೇಶಿಸಿದ ವೇಳೆ ಆಕಸ್ಮಿಕವಾಗಿ ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪವಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿ ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಅದೇ ವೇಳೆ, ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳ ಚಿಕಿತ್ಸೆಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಮೃತ ವೈದ್ಯೆಯ ಕುಟುಂಬಕ್ಕೆ ತಕ್ಷಣ ಪರಿಹಾರ ಒದಗಿಸಲು ಸರ್ಕಾರ ಸೂಚನೆ ನೀಡಿದ್ದು, ಘಟನೆಗೆ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.





















































































