
ಮಂಗಳೂರು: ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳಕ್ಕೆ ಒಂದಲ್ಲೊಂದು ಅಡ್ಡಿ ಎದುರಾಗುತ್ತಲೇ ಇದೆ.
ಸುಮಾರು ಆರು ವರ್ಷಗಳ ಹಿಂದೆ ಪ್ರಾಣಿದಯಾ ಸಂಘವು ಕಂಬಳದಲ್ಲಿ ಪ್ರಾಣಿ ಹಿಂಸೆಯನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಬಳಿಕ ಕಂಬಳಕ್ಕೆ ತಡೆ ನೀಡಿ ಪರ ವಿರೋಧದ ಚರ್ಚೆ ನಡೆದು ಕೊನೆಗೆ ಸರ್ಕಾರ ಹೈಕೋರ್ಟ್ ಆದೇಶಕ್ಕೆ ಸುಗ್ರೀವಾಜ್ಞೆ ತರುವಲ್ಲಿಯೂ ಯಶಸ್ವಿಯಾಗಿತ್ತು. ಇದೀಗ ಮತ್ತೆ ದಕ್ಷಿಣಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನಡೆಯುವ ಕಂಬಳದ ಬಗ್ಗೆ ಪ್ರಾಣಿ ಪ್ರಿಯರು ವಿರೋಧ ವ್ಯಕ್ತಪಡಿಸಿದ್ದು ಮೃಗಾಲಯದ ಸಮೀಪ ಕಂಬಳ ನಡೆಯುವುದರಿಂದ ಮೃಗಾಲಯದ ಪ್ರಾಣಿಗಳಿಗೆ ತೊಂದರೆಯಾಗುತ್ತದೆ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ 13 ವರುಷಗಳಿಂದ ಪಿಲಿಕುಳ ಮೃಗಾಲಯದ ಬಳಿ ನಡೆಯುತ್ತಿದ್ದ ಕಂಬಳ ಸ್ಥಗಿತವಾಗಿದ್ದು ಹೀಗಾಗಿ ಈ ಬಾರಿಯ ಕಂಬಳ ಸೀಸನ್‌ನಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲೇ ಪಿಲಿಕುಳದಲ್ಲಿ ಸರ್ಕಾರಿ ಪ್ರಾಯೋಜಿತ ಕಂಬಳ ನಡೆಸುವುದಕ್ಕೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು. ಕೇವಲ ಕಂಬಳ ಮಾತ್ರವಲ್ಲದೇ ಕೃಷಿ ಮತ್ತು ಜಾನುವಾರು ಮೇಳ, ಜಿಲ್ಲಾ ಮಟ್ಟದ ಜಾನಪದ ಕ್ರೀಡಾ ಕಾರ್ಯಕ್ರಮ ಸೇರಿದಂತೆ ನಾಲ್ಕು ದಿನಗಳ ತುಳುನಾಡು ಉತ್ಸವ ನಡೆಸಲು ನಿರ್ಧಾರ ಕೈಗೊಳ್ಳಲಾಗಿತ್ತು.
ಆದರೆ ಇದಕ್ಕೆ ಅಡ್ಡಪಡಿಸಿದ ಪ್ರಾಣಿಪ್ರಿಯರು ಮೃಗಾಲಯದ ಬಳಿ ಕಂಬಳ ನಡೆಸಿದರೆ ಶಬ್ದಮಾಲಿನ್ಯದಿಂದ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಇದರ ಜೊತೆ 200ಕ್ಕೂ ಹೆಚ್ಚು ಜೋಡಿ ಕೋಣ ಸ್ಪರ್ಧೆ ನಡೆಯುವ ಸ್ಥಳಕ್ಕೆ ಬರುವುದರಿಂದ ಮೃಗಾಲಯದ ಪ್ರಾಣಿಗಳಿಗೆ ವಿವಿಧ ರೀತಿಯ ರೋಗ ರುಜಿನಗಳು ಹರಡುವ ಸಾಧ್ಯತೆ ಇದೆ ಎಂದು ವಾದ ಮಂಡಿಸಿದ್ದಾರೆ. ಹೀಗಾಗಿ ಹೈಕೋರ್ಟ್‌ನಲ್ಲಿ ಹಾಕಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ಜಿಲ್ಲಾಡಳಿತ ಹಾಗೂ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.



















