
ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೆಡೆ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುವ ಭಕ್ತರಿಗೆ ಕುಮಾರಧಾರ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಾಕಷ್ಟು ಪ್ರವಾಸಿಗಳು ಭೇಟಿ ನೀಡುತ್ತಿದ್ದು ಚಂಡಮಾರುತದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಪುತ್ತೂರು ಉಪ ಆಯುಕ್ತ ಜುಬಿನ್ ಮೊಹಪಾತ್ರ ಸೂಚನೆ ನೀಡಿದ್ದಾರೆ.
ಇನ್ನು ನಾಳೆ ಮಂಗಳೂರಿನ ಪುರಭವನದಲ್ಲಿ ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಬಹುಸಂಸ್ಕೃತಿ ಉತ್ಸವವನ್ನು ಮುಂದೂಡಲಾಗಿದ್ದು ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಪ್ರವಾಸ ರದ್ದು ಮಾಡಲಾಗಿದೆ.
ಮಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಿ ಡಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ನಗರದ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗಿ ಚರಂಡಿಗಳು ಬ್ಲಾಕ್ ಆಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೊಟ್ಟಾರ ಚೌಕಿಯಲ್ಲಿ ಕೃತಕ ನೆರೆ ಸೃಷ್ಟಿಯಿಂದ ಟ್ರಾಫಿಕ್ ಜಾಮ್ ಉಂಟಾಗಿ ಸುರತ್ಕಲ್, ಮುಲ್ಕಿ, ಉಡುಪಿ ಕಡೆ ಹೋಗುವ ಮತ್ತು ಮಂಗಳೂರಿಗೆ ಬರುವ ಪ್ರಯಾಣಿಕರು ಪರದಾಡುವಂತಾಗಿದೆ.



















