ಮುಂದಿನ ಭವಿಷ್ಯದ ಯೋಜನೆಗಳ ಬಗ್ಗೆ ಇಂದು ಘೋಷಣೆ

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿರುವುದಾಗಿ ಪಕ್ಷ ತಿಳಿಸಿದೆ.
ಅಣ್ಣಾಮಲೈ ಅವರು ಇಂದು ಮಧ್ಯಾಹ್ನ ಕೋಯಮತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಮುಂದಿನ ರಾಜಕೀಯ ಯೋಜನೆಗಳನ್ನು ಪ್ರಕಟಿಸಲಿದ್ದಾರೆ. ಈ ಬೆಳವಣಿಗೆಯಿಂದ ತಮಿಳುನಾಡು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ರಾಜೀನಾಮೆ ಘೋಷಣೆಗೆ ಮುನ್ನ ಅಣ್ಣಾಮಲೈ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು ಎನ್ನಲಾಗಿದೆ.
ಮಾಜಿ ಐಪಿಎಸ್ ಅಧಿಕಾರಿ ಆಗಿರುವ ಅಣ್ಣಾಮಲೈ ಅವರು 2020ರಲ್ಲಿ ಸೇವೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶ ಮಾಡಿದ್ದರು. 2021ರಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಪಕ್ಷ ಸಂಘಟನೆಗೆ ಒತ್ತು ನೀಡಿದ್ದರು.
ಬೆಂಬಲಿಗರಿಂದ ‘ಸಿಂಗಮ್’ ಎಂದು ಕರೆಯಲ್ಪಡುವ ಅಣ್ಣಾಮಲೈ, ಯುವಕರಲ್ಲಿ ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿದ್ದರು.
































