
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನ್ಯಾ.ಡಿವೈ ಚಂದ್ರಚೂಡ್ ಅವರು ನ್ಯಾ.ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದು ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು.
ನ್ಯಾ.ಸಂಜೀವ್ ಖನ್ನಾ ಅವರು, ಮೇ 14, 1960 ರಲ್ಲಿ ಜನಿಸಿದ್ದು ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಕೆಲವು ಕಾಲ ವಕೀಲರಾಗಿ, ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜನವರಿ 2019 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡು ಈ ಅವಧಿಯಲ್ಲಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಅವರ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು.



















